Friday, November 20, 2026
Homeಪ್ರಮುಖ-ಸುದ್ದಿರಾಜ್ಯ ಸರ್ಕಾರದ ಮೇಲ್ಮನವಿ ವಜಾ;ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ

ರಾಜ್ಯ ಸರ್ಕಾರದ ಮೇಲ್ಮನವಿ ವಜಾ;ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದಂತಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸಿ. ಶರ್ಮಾ ಅವರಿದ್ದ ಪೀಠವು, ಬೈಕ್ ಟ್ಯಾಕ್ಸಿ ಸೇವೆಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು ಸೂಕ್ತ ನಿಯಮಾವಳಿಗಳ ಮೂಲಕ ನಿಯಂತ್ರಿಸುವುದು ಉತ್ತಮ ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಮಾತನಾಡಿದ ನ್ಯಾಯಮೂರ್ತಿ ಎಸ್.ಸಿ. ಶರ್ಮಾ, ‘‘ಬೈಕ್ ಟ್ಯಾಕ್ಸಿಗಳಲ್ಲಿ ಜಿಪಿಎಸ್ (GPS) ವ್ಯವಸ್ಥೆ ಅಳವಡಿಸಿರುವುದರಿಂದ ಯುವತಿಯರ ಸುರಕ್ಷತೆಯ ದೃಷ್ಟಿಯಿಂದ ಇವು ಹೆಚ್ಚು ಸುರಕ್ಷಿತವಾಗಿವೆ. ನಿಷೇಧ ಹೇರುವುದಕ್ಕಿಂತ ನಿಯಂತ್ರಿಸುವುದು ಸೂಕ್ತ. ಈಗಾಗಲೇ ದೇಶದ 25 ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ಜಾರಿಯಲ್ಲಿದೆ’’ ಎಂದು ಹೇಳಿದರು. ಇದೇ ವೇಳೆ, ಬೈಕ್ ಟ್ಯಾಕ್ಸಿ ಸೇವೆ ಒದಗಿಸುವ ಆ್ಯಪ್ ಆಧಾರಿತ ಸಂಸ್ಥೆಗಳು ಹಾಗೂ ನಿರ್ವಾಹಕರ ಮೇಲೆ ಸರ್ಕಾರ ಅಗತ್ಯ ಷರತ್ತುಗಳು ಮತ್ತು ಮಾರ್ಗಸೂಚಿಗಳನ್ನು ವಿಧಿಸಲು ನ್ಯಾಯಾಲಯ ಅವಕಾಶ ನೀಡಿದೆ.

ಖಾಸಗಿ ಸಾರಿಗೆ ಒಕ್ಕೂಟದ ಅಸಮಾಧಾನ: ಸುಪ್ರೀಂ ಕೋರ್ಟ್ ತೀರ್ಪಿಗೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿವಿಧ ಆಟೋ ಮತ್ತು ಟ್ಯಾಕ್ಸಿ ಸಂಘಟನೆಗಳನ್ನು ಪ್ರತಿನಿಧಿಸುವ ಒಕ್ಕೂಟವು, ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿದೆ.

- Advertisement -

Latest News

error: Content is protected !!