
ಉಡುಪಿ: ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಊಟೋಪಚಾರಕ್ಕೆ ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿ ಬಳಸುವಂತೆ ಸರ್ಕಾರ ಸೂಚಿಸಿರುವುದಕ್ಕೆ ಜಿಲ್ಲೆಯ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ನೇತೃತ್ವದಲ್ಲಿ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ನಾಲ್ವರು ಬಿಜೆಪಿ ಶಾಸಕರು, ಗ್ರಾಮಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ರಾಜಕೀಯ ಕಾರ್ಯಕ್ರಮಗಳಿಗೆ ಬಳಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಈಗಾಗಲೇ ಅನುದಾನದ ಕೊರತೆಯಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ಫಲಾನುಭವಿಗಳ ಸಮಾವೇಶದ ಊಟೋಪಚಾರಕ್ಕಾಗಿ ಪಂಚಾಯಿತಿ ನಿಧಿಯಿಂದ ಗರಿಷ್ಠ ₹25 ಸಾವಿರ ಖರ್ಚು ಮಾಡುವಂತೆ ಸೂಚಿಸಿರುವುದು ಗ್ರಾಮಗಳ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂದು ಆರೋಪಿಸಿದರು.
ಸರ್ಕಾರ ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಪತ್ರ ಸಲ್ಲಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಉಪಸ್ಥಿತರಿದ್ದರು.


