
ಹಾಸನ ಜಿಲ್ಲೆಯಿಂದ 50-60 ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರಕ್ಕೆ ಸ್ಥಳಾಂತರಿಸುವ ಅರಣ್ಯ ಇಲಾಖೆಯ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಸೋಮವಾರ ವಿಧಾನಸೌಧಕ್ಕೆ ಆಗಮಿಸಿದ ಅವರು, ಸ್ಪೀಕರ್ ಕಚೇರಿಗೆ ತೆರಳಿ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಹಾಸನದಿಂದ ಕಾಡಾನೆಗಳನ್ನು ಮೂಡಿಗೆರೆ ಕ್ಷೇತ್ರಕ್ಕೆ ಸ್ಥಳಾಂತರಿಸುವ ಮೊದಲು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಮೂಡಿಗೆರೆ ಕ್ಷೇತ್ರದ ಜನರು ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೆ 50-60 ಆನೆಗಳನ್ನು ಕ್ಷೇತ್ರಕ್ಕೆ ಸ್ಥಳಾಂತರಿಸಿದರೆ ರೈತರ ಕಾಫಿ, ಅಡಿಕೆ ಮತ್ತು ಭತ್ತದ ಬೆಳೆಗಳಿಗೆ ಹಾನಿಯಾಗುವ ಜೊತೆಗೆ ಜನರ ಜೀವಕ್ಕೂ ಅಪಾಯ ಎದುರಾಗಲಿದೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿರುವ ನಯನಾ ಮೋಟಮ್ಮ, ಕ್ಷೇತ್ರದ ಜನರ ಹಿತದೃಷ್ಟಿಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.
ರಾಜೀನಾಮೆ ಸ್ವೀಕಾರವಾಗಿಲ್ಲ!
ಆದರೆ, ನಿಯಮಾವಳಿಗಳ ಪ್ರಕಾರ ಸ್ಪೀಕರ್ ಅವರಿಂದಲೇ ರಾಜೀನಾಮೆ ಸ್ವೀಕಾರ ಪ್ರಕ್ರಿಯೆ ನಡೆಯಬೇಕಿದ್ದು, ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಅವರು ಪತ್ರವನ್ನು ಅಧಿಕೃತವಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಅವರಿಗೂ ಮಾಹಿತಿ ನೀಡಲಾಗಿದೆ. ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.


