
ಮಂಗಳೂರು: ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉಳ್ಳಾಲದ ಬಸ್ತಿ ಪಡ್ಪು ನಿವಾಸಿ ಜಿಂಕೆ ಜಿಮ್ಮಿ ಅಲಿಯಾಸ್ ಮಹಮ್ಮದ್ ಪೈಜಲ್ ಎಂದು ಗುರುತಿಸಲಾಗಿದೆ. 2016ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 457, 380 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದರೂ, ಆರೋಪಿ ಕಳೆದ ಐದು ವರ್ಷಗಳಿಂದ ಸತತವಾಗಿ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದ.
2026ರಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ಎಲ್ಪಿಸಿ (Long Pending Case) ಎಂದು ಪರಿಗಣಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಠಾಣೆಯ ಪೊಲೀಸರು ನವೆಂಬರ್ 24ರಂದು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಕಳವು ಪ್ರಕರಣಗಳು ದಾಖಲಾಗಿವೆ.


