Thursday, November 26, 2026
Homeಕರಾವಳಿಮಂಗಳೂರುಮಂಗಳೂರು ; ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ನಂಬಿಸಲು ಯತ್ನಿಸಿದ ಪತಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು ; ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ನಂಬಿಸಲು ಯತ್ನಿಸಿದ ಪತಿಗೆ 5 ವರ್ಷ ಜೈಲು ಶಿಕ್ಷೆ

- Advertisement -
- Advertisement -

ಮಂಗಳೂರು: ಪತ್ನಿಯನ್ನು ಹತ್ಯೆಗೈದು, ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ನಂಬಿಸಲು ಯತ್ನಿಸಿದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ನಿವಾಸಿ ಸಂಜೀವ ನಾಯ್ಕ ಶಿಕ್ಷೆಗೊಳಗಾದ ಅಪರಾಧಿ. 2024ರ ಡಿಸೆಂಬರ್ 11ರಂದು ರಾತ್ರಿ ತನ್ನ ಪತ್ನಿ ಹೃದಯಾಘಾತದಿಂದ ಕುಸಿದು ಬಿದ್ದಿರುವುದಾಗಿ ಸಂಜೀವ ನಾಯ್ಕ ನೆರೆಹೊರೆಯವರಿಗೆ ತಿಳಿಸಿದ್ದನು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದರು.

ಆದರೆ, ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿತ್ತು. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಇ. ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಿ, ಪತಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು, ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 105 (ಭಾಗ 2) ರ ಅಡಿಯಲ್ಲಿ 5 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 5,000 ರೂ. ದಂಡ (ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 6 ತಿಂಗಳು ಜೈಲು) ಹಾಗೂ ಕಲಂ 240ರ ಅಡಿಯಲ್ಲಿ 6 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ಸಮರ್ಥವಾಗಿ ವಾದ ಮಂಡಿಸಿದ್ದರು.

- Advertisement -

Latest News

error: Content is protected !!