
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಅನುಮೋದಿಸಿರುವ ಸರ್ಕಾರ, ಅದರ ಅನುಷ್ಠಾನಕ್ಕೆ ಆದೇಶ ಹೊರಡಿಸಿದೆ.
ಈ ಆದೇಶದ ಪ್ರಕಾರ, ಎರಡೂ ಜಿಲ್ಲೆಗಳ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಇನ್ನು ಮುಂದೆ ತುಳು ಭಾಷೆಯಲ್ಲಿಯೇ ಅರ್ಜಿ ಹಾಗೂ ಮನವಿಗಳನ್ನು ಸಲ್ಲಿಸಬಹುದು. ಅಧಿಕಾರಿಗಳು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಉತ್ತರ ನೀಡಲಿದ್ದಾರೆ. ಜಿಲ್ಲಾಧಿಕಾರಿಗಳ ಪ್ರಮುಖ ಆದೇಶಗಳು ಮತ್ತು ಸರ್ಕಾರಿ ಕಚೇರಿಗಳ ಸೂಚನಾ ಫಲಕಗಳಲ್ಲಿಯೂ ಕನ್ನಡದ ಜೊತೆಗೆ ತುಳು ಭಾಷೆಯನ್ನು ಬಳಸಲಾಗುತ್ತದೆ. ಆಡಳಿತಾತ್ಮಕ ಕೆಲಸಗಳಲ್ಲಿ ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿಯೇ ಬರೆಯಲಾಗುತ್ತದೆ.
ಇದಕ್ಕಾಗಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ಪ್ರತ್ಯೇಕ ಅನುಷ್ಠಾನ ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಒಟ್ಟು 20 ಭಾಷಾಂತರಕಾರರ ನೇಮಕಕ್ಕೂ ಸರ್ಕಾರ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ತಲಾ ಇಬ್ಬರು ಹಾಗೂ ಎರಡೂ ಜಿಲ್ಲೆಗಳ 16 ತಾಲೂಕುಗಳ ತಹಶೀಲ್ದಾರ್ ಕಚೇರಿಗಳಲ್ಲಿ ತಲಾ ಒಬ್ಬರಂತೆ ಭಾಷಾಂತರಕಾರರು ಕಾರ್ಯನಿರ್ವಹಿಸಲಿದ್ದಾರೆ. ಇವರಿಗೆ ಎಲ್ಲ ವೆಚ್ಚಗಳನ್ನು ಒಳಗೊಂಡಂತೆ ಮಾಸಿಕ 30 ಸಾವಿರ ರೂ. ಗೌರವ ಸಂಭಾವನೆ ನಿಗದಿಪಡಿಸಲಾಗಿದೆ.


