
ಮಂಗಳೂರು: ನಗರದ ಉರ್ವಾ ಮಾರ್ಕೆಟ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜಿತೇಶ್ ಎಂಬ ಯುವಕ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಫಾರ್ಚುನರ್ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಮೂವರು ಯುವಕರು ಉರ್ವಾ ಮಾರ್ಕೆಟ್ ಸಮೀಪದ ಫಾಸ್ಟ್ ಫುಡ್ ಅಂಗಡಿಯಿಂದ ಪಾರ್ಸೆಲ್ ತರಲು ಕಾರಿನಲ್ಲಿ ಬಂದಿದ್ದರು. ಈ ವೇಳೆ ಇಬ್ಬರು ಯುವಕರು ಕಾರಿನಿಂದ ಇಳಿದು ಅಂಗಡಿಗೆ ತೆರಳಿದ್ದು, ಜಿತೇಶ್ ಮಾತ್ರ ಕಾರಿನಲ್ಲೇ ಕುಳಿತು ಸ್ನೇಹಿತರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ರಜೆಯ ನಿಮಿತ್ತ ಊರಿಗೆ ಬಂದಿದ್ದ ಜಿತೇಶ್ ಸ್ನೇಹಿತರನ್ನು ಭೇಟಿಯಾಗಲು ಅವರೊಂದಿಗೆ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ವೇಗವಾಗಿ ಬಂದ ಫಾರ್ಚುನರ್ ಕಾರು ನಿಂತಿದ್ದ ಕಾರಿಗೆ ಬಲವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಜಿತೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯನ್ನು ಕಣ್ಣಾರೆ ಕಂಡ ಇಬ್ಬರು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ತಕ್ಷಣ ಮೃತ ಯುವಕನನ್ನು ಎ.ಜೆ. ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಅಪಘಾತದ ಬಳಿಕ ಫಾರ್ಚುನರ್ ಕಾರಿನಲ್ಲಿದ್ದ ವ್ಯಕ್ತಿಯನ್ನು ಇತರರು ಸ್ಥಳದಿಂದ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಅಲ್ಲದೆ, ಕಾರಿನ ನಂಬರ್ ಪ್ಲೇಟ್ ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಜಿತೇಶ್ ಅವರ ಸ್ನೇಹಿತರು ಹಾಗೂ ಸ್ಥಳದಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಕೂಡ ವಾಗ್ವಾದ ನಡೆದಿದ್ದು, ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.


