ಮಂಗಳೂರು: ಬೆಳ್ತಂಗಡಿ ತಾಲೂಕಿನಲ್ಲಿ ನೇತ್ರಾವತಿ ನದಿಗೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದ ವಿಸ್ತೃತ ಯೋಜನಾ ವರದಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 240 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಳ್ತಂಗಡಿ ತಾಲೂಕಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ 1,100 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದಾಗಿದೆ. ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ.

ತಾಲೂಕಿನ ಮೊಗ್ರು ಗ್ರಾಮದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ, ಇಳಂತಿಲ, ಬಂದಾರು, ಕಣಿಯೂರು, ಉರುವಾಲು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮಗಳಲ್ಲಿ ನೀರಾವರಿ ಸೌಲಭ್ಯ ಅಭಿವೃದ್ಧಿಪಡಿಸಲು ಅನುದಾನ ಬಿಡುಗಡೆಗಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಡಿಪಿಆರ್ ಗೆ ಅನುಮೋದನೆ ಲಭಿಸಿದೆ.

ಅಲ್ಲದೇ ಮಂಗಳೂರಿನಲ್ಲಿ ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ಕಟ್ಟಡ ನಿರ್ಮಾಣಕ್ಕೆ ಕೂಡಾ ಇಂದು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.