ಬೆಂಗಳೂರು: ಮಂಗಳೂರಿನಲ್ಲಿ ಜನಮನ್ನಣೆಯ ಪ್ರಧಾನಿ ನರೇಂದ್ರ ಮೋದಿಯವರ ಅಪಾರ ಜನಸಂದಣಿಯ ಕಾರ್ಯಕ್ರಮ ಮತ್ತು ದೊಡ್ಡಬಳ್ಳಾಪುರದ ಜನಸ್ಪಂದನಕ್ಕೆ ಸ್ವಯಂಪ್ರೇರಿತ ಜನಸಾಗರವನ್ನು ಗಮನಿಸಿ ಸಿದ್ದರಾಮಯ್ಯರು ಸ್ಥಿಮಿತ ಕಳೆದುಕೊಂಡಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕಟೀಲ್, ಅದಕ್ಕಾಗಿಯೇ ಅವರು ತಮ್ಮ ಸುಳ್ಳಿನ ಸರಮಾಲೆ, ವ್ಯರ್ಥ ಆರೋಪಗಳ ಮೂಲಕ ನಾಟಕ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕನ್ನಡನಾಡಿನ ಜನತೆ ನಿರ್ಧರಿಸಿದ್ದು, ಅಧಿಕಾರ ಗಳಿಸುವ ಕಾಂಗ್ರೆಸ್ಸಿಗರ ಕನಸು ಕೇವಲ ಹಗಲುಗನಸಾಗಿ ಉಳಿಯಲಿದೆ ಎಂದು ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜನರು ಸೋಲಿಸಿ ರಾಜಕೀಯವಾಗಿ ಮೂಲೆಗುಂಪಾಗುವಂತೆ ಮಾಡಲಿದ್ದಾರೆ ಎಂದು ತಿಳಿಸಿರುವ ಕಟೀಲ್, ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ದೃಢವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಸಿದ್ದರಾಮಯ್ಯ ಎಂದರೆ ಡೋಂಗಿತನ, ಹಿಂದೂ ವಿರೋಧಿತನದ ಸಂಕೇತ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿರುವ ನಳೀನ್ ಕುಮಾರ್ ಕಟೀಲ್, ರಾಷ್ಟ್ರವಿರೋಧಿ ಶಕ್ತಿಗಳ ಜೊತೆ ಕೈ ಜೋಡಿಸುವ ಮತ್ತು ಧರ್ಮಗಳನ್ನು ಒಡೆಯುವ ಸಿದ್ದರಾಮಯ್ಯರ ಸ್ವಾರ್ಥ ರಾಜಕಾರಣ ಜನರಿಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಹೇಳಿದ್ದಾರೆ.