ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಶ್ರೀರಾಮಪುರದಲ್ಲಿ ನಡೆದಿದೆ. ಈ ಸಂಬಂಧ ಆರೋಪಿ ಇಂದುಶೇಖರ್‌ನನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದವರನ್ನು ರೂಪವತಿ, ಆಕೆಯ ಮಗಳು ಸುನೀತಾ, ಪುತ್ರರಾದ ಶಿವಕುಮಾರ್ ಮತ್ತು ಶಂಕರ್, ಸೊಸೆಯಂದಿರಾದ ದಿವ್ಯಾ ಮತ್ತು ನಳಿನ ಹಾಗೂ ಏಳು ವರ್ಷದ ಮೊಮ್ಮಗ ಪುನೀತ್ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಇಂದುಶೇಖರ್ ಮತ್ತು ಸುನೀತಾ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ, ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಹಲವು ಬಾರಿ ರಾಜಿ ಸಂಧಾನ ನಡೆಸಿದರೂ ಸಮಸ್ಯೆ ಬಗೆಹರಿದಿರಲಿಲ್ಲ. ಪತ್ನಿಯ ತಾಯಿ ಮತ್ತು ಸಹೋದರರು ಯಾವಾಗಲೂ ಸುನೀತಾಳ ಪರವಾಗಿ ನಿಲ್ಲುತ್ತಾರೆ ಎಂಬ ಅಸಮಾಧಾನ ಇಂದುಶೇಖರ್‌ಗೆ ಇತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮೊದಲು ಪತ್ನಿ ಸುನೀತಾಳನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ನಂದಿ ಬೆಟ್ಟದ ತಪ್ಪಲಿಗೆ ಕೊಂಡೊಯ್ದು ಎಸೆದಿದ್ದಾನೆ. ಪತ್ನಿ ಎಲ್ಲಿದ್ದಾಳೆ ಎಂದು ಕೇಳಿದವರಿಗೆ ಪ್ರವಾಸಕ್ಕೆ ಹೋಗಿದ್ದಾಳೆ ಎಂದು ಸುಳ್ಳು ಹೇಳಿದ್ದಾನೆ.
ನಂತರ ಮದ್ಯದ ಪಾರ್ಟಿ ನೆಪದಲ್ಲಿ ಭಾಮೈದರಾದ ಶಿವಕುಮಾರ್ ಮತ್ತು ಶಂಕರ್ ಅವರನ್ನು ಮನೆಗೆ ಕರೆಸಿ ಕೊಲೆ ಮಾಡಿದ್ದಾನೆ. ಬಳಿಕ ಅವರ ಪತ್ನಿಯರಾದ ನಳಿನ ಮತ್ತು ದಿವ್ಯಾ, ಅತ್ತೆ ರೂಪವತಿ ಹಾಗೂ ಏಳು ವರ್ಷದ ಬಾಲಕ ಪುನೀತ್‌ನನ್ನೂ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ನಳಿನ ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯ ತವರು ಮನೆಯವರು ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವೇಳೆ ಇಂದುಶೇಖರ್‌ನನ್ನು ವಿಚಾರಣೆ ನಡೆಸಿದ ಪೊಲೀಸರಿಗೆ ಆತನ ಹೇಳಿಕೆಗಳಲ್ಲಿ ಅನುಮಾನ ಮೂಡಿದೆ. ಬಳಿಕ ಆತನ ಮನೆಗೆ ತೆರಳಿ ಪರಿಶೀಲನೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.
ಏಳು ಕೊಲೆಗಳಿಗೆ ಬಳಸಿದ್ದ ರುಬ್ಬುವ ಕಲ್ಲನ್ನು ತೊಳೆದು ಮನೆಯಲ್ಲೇ ಇಟ್ಟಿರುವುದು ಪೊಲೀಸರ ಪರಿಶೀಲನೆ ವೇಳೆ ಪತ್ತೆಯಾಗಿದೆ. ಸದ್ಯ ಬಾಲಕ ಪುನೀತ್‌ನ ಮೃತದೇಹ ಪತ್ತೆಯಾಗಿದ್ದು, ಉಳಿದವರ ಮೃತದೇಹಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.


