Friday, November 20, 2026
Homeಕರಾವಳಿಉಡುಪಿಮಣಿಪಾಲ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಆರೋಪ; ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಮಣಿಪಾಲ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಆರೋಪ; ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಸ್ಪಷ್ಟನೆ

- Advertisement -
- Advertisement -

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಘಟನೆಗೆ ಸಂಬಂಧಿಸಿದಂತೆ ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪೊಲೀಸರ ವಿರುದ್ಧ ಮಾಡಿರುವ ದೌರ್ಜನ್ಯದ ಆರೋಪಗಳಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿರಾಂ ಶಂಕರ್ ಸ್ಪಷ್ಟನೆ ನೀಡಿದ್ದಾರೆ.

ಈ ಪ್ರಕರಣದಲ್ಲಿ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಪ್ರಕಾರ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿರಲಿಲ್ಲ. ಹೀಗಾಗಿ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳು, ವಿಡಿಯೋ ದಾಖಲೆಗಳು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಆಧರಿಸಿ ಕಾನೂನು ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಎಸ್‌ಪಿ ಹೇಳಿದ್ದಾರೆ.

ಇನ್ನು ಪೊಲೀಸರು ಹಾಸ್ಟೆಲ್‌ಗಳಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಬಗ್ಗೆಯೂ ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ಸದ್ಯ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ತನಿಖಾಧಿಕಾರಿಯಾಗಿ ಮಣಿಪಾಲ ಠಾಣೆಯ ಪಿಎಸ್‌ಐ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳ ಆರೋಪವೇನು?

ಕಳೆದ ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ಅಮಾಯಕ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

ನ.10ರಂದು ಪೊಲೀಸರು ತಮ್ಮ ಫ್ಲಾಟ್‌ಗಳಿಗೆ ನುಗ್ಗಿ, ಪರೀಕ್ಷೆಗಾಗಿ ಓದುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದರು. ರಸ್ತೆಯಲ್ಲಿ ಕಿಡಿಗೇಡಿಗಳು ನಡೆಸಿದ ಕೃತ್ಯಕ್ಕೆ ಯಾವುದೇ ಸಂಬಂಧವಿಲ್ಲದ ವಿದ್ಯಾರ್ಥಿಗಳನ್ನು ಪೊಲೀಸರು ಗುರಿಯಾಗಿಸಿಕೊಂಡಿದ್ದಾರೆ ಎಂಬುದು ಅವರ ಆರೋಪವಾಗಿದೆ.

ಈ ಸಂಬಂಧ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ, ಪ್ರಕರಣದಲ್ಲಿ ತಕ್ಷಣ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು. ಈ ಆರೋಪಗಳ ಹಿನ್ನೆಲೆಯಲ್ಲಿ ಇದೀಗ ಉಡುಪಿ ಎಸ್‌ಪಿ ಸ್ಪಷ್ಟನೆ ನೀಡಿದ್ದಾರೆ.

- Advertisement -

Latest News

error: Content is protected !!