ಸುರತ್ಕಲ್: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭಿಣಿಯಾದಾಗ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿಯೊಬ್ಬಳು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತ ಬಾಲಕಿಗೆ ಪ್ರೀತಿಯ ಜಾಲ ಬೀಸಿ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ತಾನು ಗರ್ಭಿಣಿಯಾಗಿರುವ ವಿಷಯವನ್ನು ಬಾಲಕಿ ಆರೋಪಿಗೆ ತಿಳಿಸಿದಾಗ, ಆತ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತಿರಸ್ಕರಿಸಿದ್ದಾನೆ. ಇದರಿಂದ ಕಂಗೆಟ್ಟ ಬಾಲಕಿ ಜೂನ್ 22ರಂದು ತನ್ನ ತಾಯಿಗೆ ವಿಷಯ ತಿಳಿಸಿದ್ದು, ತಾಯಿ ಆಕೆಗೆ ಧೈರ್ಯ ತುಂಬಿದ್ದರು. ಆದರೆ ಮರುದಿನ ಬೆಳಗ್ಗೆ ತಾಯಿ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಹಿಂದಿರುಗಿದಾಗ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಸುರತ್ಕಲ್ ಪೊಲೀಸರು ಆರೋಪಿ ಮನೀಶ್ ಪೂಜಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.


