ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚಿಸಲಾಗಿದ್ದು, ದಿನದಲ್ಲಿ 12 ಗಂಟೆ ಗಸ್ತು ತಿರುಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ಇಂದು ಉತ್ತರ ನೀಡಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.
ಮಕ್ಕಳ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ದಿನದ 24 ಗಂಟೆಯೂ ಸಹಾಯವಾಣಿಗಳನ್ನು ತೆರೆಯಲಾಗಿದೆ ಎಂದು ತಿಳಿಸಿರುವ ಸಚಿವೆ ಹೆಬ್ಬಾಳ್ಕರ್, ಕಳೆದ ವರ್ಷ ನವೆಂಬರ್ 28 ರಂದು ಅಕ್ಕ ಪಡೆಗೆ ಚಾಲನೆ ನೀಡಲಾಗಿದ್ದು, ಈ ಅಕ್ಕಪಡೆ ಎಲ್ಲೆಡೆ ಗಸ್ತು ತಿರುಗುತ್ತದೆ. 1098 ಸಂಖ್ಯೆಗೆ ಕರೆ ಮಾಡಬಹುದು. ಅಕ್ಕ ಪಡೆಗೆ ಮಹಿಳಾ ಸಹಾಯವಾಣಿ ಸಂಖ್ಯೆ 181, ಜೊತೆಗೆ ಪೊಲೀಸ್ ಇಲಾಖೆಯ 112 ಸಂಖ್ಯೆಗೆ ಕರೆ ಮಾಡಬಹುದು ಎಂದು ಉತ್ತರ ನೀಡಿದ್ದಾರೆ.
ಅಲ್ಲದೇ, ದೌರ್ಜನ್ಯ ತಡೆಗಟ್ಟಲು ಗ್ರಾಮ ಪಂಚಾಯತ್ ನಿಂದ ಹಿಡಿದು ಮೇಲ್ಮಟ್ಟದವರೆಗೂ ಸಮಿತಿ ರಚಿಸಲಾಗಿದೆ ಎಂದೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಇದೇ ವೇಳೆ, ಮಹಿಳೆಯರ ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಾಕಷ್ಟು ಪ್ರಚಾರ ಮಾಡಲಾಗುತ್ತಿದೆ. ಬೀದಿ ನಾಟಕಗಳ ಮೂಲಕ ಜನರನ್ನು ತಲುಪುವ ಕೆಲಸ ಮಾಡಲಾಗುತ್ತಿದೆ, ಆಕಾಶವಾಣಿಯಲ್ಲಿ ಒಂದೂವರೆ ತಿಂಗಳ ಪ್ರಚಾರ ನೀಡಲಾಗಿದೆ ಎಂದು ಕೂಡಾ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.


