ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನೇಕೆ ರಾಜೀನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು ಎಂದೂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇದೇ ವೇಳೆ, ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದ್ದು, ನನ್ನನ್ನು ಕರೆದರೆ ನಾನು ಹೋಗುತ್ತೇನೆ ಎಂದು ಹೇಳಿರುವ ಡಿಸಿಎಂ, ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಲು ಹೈಕಮಾಂಡ್ ಭೇಟಿ ಮಾಡುತ್ತಿರುವುದಾಗಿ ಹೇಳಿದ್ದಾರೆ.


