
ಬೆಳ್ತಂಗಡಿ: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 18 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿ ನಿವಾಸಿ ಹರ್ಷಿತ್ (18) ಮೃತಪಟ್ಟ ಯುವಕ. ಅವರು ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದರು.
ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹರ್ಷಿತ್ ಅವರನ್ನು ಕುಟುಂಬಸ್ಥರು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 27ರಂದು ಅವರು ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ ಚೆಲುವಮ್ಮ ಹಾಗೂ ಸಹೋದರಿ ಪ್ರತೀಕ್ಷಾ ಅವರನ್ನು ಅಗಲಿದ್ದಾರೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


