ಮಂಗಳೂರು: ಮೊನ್ನೆ ಮಂಗಳೂರಿನಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೇಲೆ ದಾಳಿ ನಡೆಸಿದ ಘಟನೆ ಮಾಸುವ ಮುನ್ನವೇ ಪೊಲೀಸರ ಮೇಲೆ ಮತ್ತೊಂದು ದಾಳಿಯಾಗಿದೆ. ಕಾವೂರು ಠಾಣೆ ವ್ಯಾಪ್ತಿಯ ಚೆಕ್‌ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ನಿನ್ನ ತಡರಾತ್ರಿ ದಾಳಿ ನಡೆಸಿದ್ದಾರೆ.
ನಿನ್ನೆ ರಾತ್ರಿ ಕಾವೂರು ಠಾಣೆ ವ್ಯಾಪ್ತಿಯ ಚೆಕ್‌ಪೋಸ್ಟ್ ನಲ್ಲಿ ಎಂದಿನಂತೆ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ಪೊಲೀಸರ ಮೇಲೆ ದಾಳಿ ನಡೆಸಿದೆ. ಬಳಿಕ ದುಷ್ಕರ್ಮಿಗಳು ಪೊಲೀಸರಲ್ಲಿದ್ದ ಬಂದೂಕುಗಳನ್ನು ಕಿತ್ತು ನೆಲಕ್ಕೆ ಹೊಡೆದು ಧ್ವಂಸಗೊಳಿಸಿದ್ದಾರೆಂದು ತಿಳಿದುಬಂದಿದೆ.
ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ವಶದಲ್ಲಿರುವ ಎಲ್ಲರೂ ನಗರದ ಕಾಲೇಜೊಂದರ ವಿದ್ಯಾರ್ಥಿ ಗಳೆಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಮಾದಕದ ನಶೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪದೇ ಪದೇ ಪೊಲೀಸರ ಮೇಲೆ ದಾಳಿಯಾಗುತ್ತಿರೋದು ಮಂಗಳೂರಿನಲ್ಲಿ ಪೊಲೀಸರಿಗೆ ರಕ್ಷಣೆ ಇಲ್ವಾ ಅನ್ನೋ ಅನುಮಾನವನ್ನು ಹುಟ್ಟು ಹಾಕುತ್ತಿದೆ.