ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಹಣ ದುರುಪಯೋಗವಾಗಿದೆ ಎಂಬ ಆರೋಪಗಳ ಬೆನ್ನಲ್ಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹತ್ವದ ಹೇಳಿಕೆ ನೀಡಿದ್ದು, ವಿಶೇಷ ತನಿಖಾ ದಳ (SIT) ನಡೆಸುತ್ತಿರುವ ತನಿಖೆಯಿಂದ ಸಂಪೂರ್ಣ ಸತ್ಯಾಂಶ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಅಯೋಧ್ಯೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮನವಿಯ ಮೇರೆಗೆ ಈ ತನಿಖೆಗೆ ಆದೇಶಿಸಲಾಗಿದ್ದು, ಭಕ್ತರ ಭಾವನೆಗಳಿಗೆ ಧಕ್ಕೆ ತರುವಂತಹ ಆಧಾರರಹಿತ ಹೇಳಿಕೆಗಳನ್ನು ನೀಡದಂತೆ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಯಾರ ಬಳಿಯಾದರೂ ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಅದನ್ನು ಎಸ್‌ಐಟಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸಬೇಕು ಎಂದು ಕರೆ ನೀಡಿದ ಸಿಎಂ, ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡುಬರುವವರು ಎಷ್ಟೇ ಪ್ರಭಾವಿಯಾಗಿದ್ದರೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಭರವಸೆ ನೀಡಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಅವರು ಅಯೋಧ್ಯೆಯಲ್ಲಿ ₹378 ಕೋಟಿಗೂ ಅಧಿಕ ಮೌಲ್ಯದ 126 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ್ದಲ್ಲದೆ, ಸ್ವಾತಂತ್ರ್ಯ ಹೋರಾಟಗಾರ್ತಿ ಝಲ್ಕರಿ ಬಾಯಿ ಅವರ ಪ್ರತಿಮೆಯನ್ನೂ ಅನಾವರಣಗೊಳಿಸಿದರು.


