
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅವರು ಮಂಗಳವಾರ (ಆಗಸ್ಟ್ 18) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯೂ ನಡೆದಿತ್ತು. ಪ್ರಸ್ತುತ ಬೆಂಗಳೂರಿನ ಮಗಳ ಮನೆಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದಾರೆ. ಬುಧವಾರ (ಆಗಸ್ಟ್ ೧೯) ಅವರ ಹುಟ್ಟೂರಾದ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.
1959ರ ಜುಲೈ ೧ರಂದು ಜನಿಸಿದ್ದ ಬಿ.ಸಿ. ನಾಗೇಶ್ ಅವರು ಎಬಿವಿಪಿ (ABVP) ಮತ್ತು ಆರ್‌ಎಸ್ಎಸ್ (RSS) ಮೂಲಕ ಸಕ್ರಿಯ ರಾಜಕಾರಣ ಪ್ರವೇಶಿಸಿ, 1984 ರಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಹಾಗೂ ಸಕಾಲ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.


