ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ.
ಬಹುಭಾಷಾ ಕಲಾವಿದ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ ನೇಮಿಸಲಾಗಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ನಡೆಯಲಿದೆ.
ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದ್ದು, ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31 ಕೊನೆಯ ದಿನಾಂಕವಾಗಿರುತ್ತದೆ.
ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ 400ಕ್ಕೂ ಹೆಚ್ಚು ಪ್ರದರ್ಶನಗಳು ಇರಲಿವೆ. ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. 2025-26 ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ಅಗತ್ಯವಿರುವ ಏಳು ಕೋಟಿ ರೂಪಾಯಿಗಳ ಅನುದಾನವನ್ನು ರಾಜ್ಯ ಸರ್ಕಾರ ಒದಗಿಸಿದೆ.


