ಬಂಟ್ವಾಳ : ಬೆಳ್ತಂಗಡಿಯಿಂದ ಸೀಮಂತ ಮುಗಿಸಿ ಬರುವಾಗ ಮಿನಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಯುವಕ ಮೃತಪಟ್ಟಿರುವ ಘಟನೆ ಪುದು ಗ್ರಾಮದ 10ನೇ ಮೈಲಿಗಲ್ಲು ಎಂಬಲ್ಲಿ ನಡೆದಿದೆ. ಮಂಗಳೂರು ಮೂಲದ ವಿಕಾಸ್ ಮೃತ ದುರ್ದೈವಿ.ಘಟನೆಯಲ್ಲಿ ಇತರೆ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಮೂಲದ ವಿಕಾಸ್ ಮತ್ತು ಅವರ ಸಂಬಂಧಿಕರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದ ಸೀಮಂತ ಕಾರ್ಯಕ್ರಮಕ್ಕೆ ತೆರಳಿದ್ದರು. ಸಂಜೆ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಮಿನಿ ಬಸ್ ನಲ್ಲಿ ವಾಪಸ್ಸಾಗುತ್ತಿದ್ದಾಗ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಪುದು ಗ್ರಾಮದ ಸಮೀಪ ಬರುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆ ಬಲವಾಗಿ ಡಿಕ್ಕಿ ಹೊಡೆದು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ.
ಅಪಘಾತದ ರಭಸಕ್ಕೆ ಒಟ್ಟು 9 ಮಂದಿ ಗಾಯಗೊಂಡಿದ್ದು, ಈ ಪೈಕಿ ವಿಕಾಸ್ ಅವರ ಸ್ಥಿತಿ ಗಂಭೀರವಾಗಿತ್ತು. ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ತೀವ್ರ ರಕ್ತಸ್ರಾವವಾಗಿದ್ದರಿಂದ ವಿಕಾಶ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.


