ಬಂಟ್ವಾಳ: ಕೋವಿಡ್-19 ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ಸಿ.ಐ. ನೇತೃತ್ವದ ಪೋಲೀಸ್ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.
ಲಾಕ್ ಡೌನ್ ಅವಧಿಯಲ್ಲಿ ಗುಂಪು ಕಟ್ಟಿಕೊಂಡು ಅಂಗಡಿಗಳನ್ನು ತೆರೆದಿಟ್ಟಲ್ಲದೆ, ಪ್ರಶ್ನಿಸಿದ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಬಗ್ಗೆ ಪ್ಲೈಯಿಂಗ್ ಸ್ವ್ಕಾಡ್ ನ ಮಹಿಳಾ ಅಧಿಕಾರಿ ಯೋರ್ವರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಸೋಮವಾರ ಮಧ್ಯಾಹ್ನ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ಡಿ.ವೈ.ಎಸ್.ಪಿ.ಯವರ ನಿರ್ದೇಶನದಂತೆ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಎರಡು ಎಸ್.ಐ.ಗಳ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಉಳಿದಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ. ಉಳಿದವರ ಮಾಹಿತಿ ಲಭ್ಯವಾಗಿದ್ದು ಶೀಘ್ರದಲ್ಲೇ ಅವರ ಬಂಧನ ಮಾಡುವುದಾಗಿಯೂ ತಿಳಿಸಿದ್ದಾರೆ.