
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಬಡ್ಡೂರುಖಾನ್ ಎಂಬಲ್ಲಿ ಮನೆಯ ಬೆಡ್‌ರೂಮ್‌ನ ಮಂಚದ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಮೃತರನ್ನು ವಿನ್ಸೆಂಟ್ ಡಿಸೋಜ (48) ಎಂದು ಗುರುತಿಸಲಾಗಿದೆ. ಕಳೆದ ಆರು ವರ್ಷಗಳಿಂದ ಇವರು ಸಂಬಂಧಿಕರಾದ ಜೈಸನ್ ಲೋಬೋ ಅವರ ಮನೆ ಹಾಗೂ ತೋಟದ ಕೆಲಸ ಮಾಡಿಕೊಂಡಿದ್ದರು. ಅವಿವಾಹಿತರಾಗಿದ್ದ ವಿನ್ಸೆಂಟ್, ವೈಯಕ್ತಿಕ ಕಾರಣಗಳಿಂದ ಮನನೊಂದು ವಿಪರೀತ ಮದ್ಯ ಸೇವಿಸುತ್ತಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು.
ನವೆಂಬರ್ 10ರಂದು ಬೆಳಗ್ಗೆ ನೆರೆಮನೆಯ ಸ್ಟ್ಯಾನಿ ಡಿಸೋಜ ಅವರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದು ಬೆಳಕಿಗೆ ಬಂದಿದೆ. ವಿನ್ಸೆಂಟ್ ಅವರು ಸುಮಾರು ಐದಾರು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


