
ಬೆಳ್ತಂಗಡಿ: ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ಗುತ್ತಿಗೆ ಕಂಪನಿಯ ನೀರಿನ ಟ್ಯಾಂಕರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಬೆಳ್ತಂಗಡಿಯ ಸಂತೆಕಟ್ಟೆ ಸಮೀಪ ಗುರುವಾರ ನಡೆದಿದೆ.
ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆಗೆ ಸಾಗುತ್ತಿದ್ದ ಕಾರಿಗೆ, ಸಂತೆಕಟ್ಟೆ ಬಳಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ತಕ್ಷಣವೇ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ


