
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್ ಲಭಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜು ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ಶುಕ್ರವಾರ (ಜುಲೈ 31) ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಈ ಮಹತ್ವದ ತೀರ್ಪಿನಿಂದಾಗಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಮರುಸ್ಥಾಪನೆಯಾಗಲಿದ್ದು, ಜಾಮೀನು ನೀಡಲು ನ್ಯಾಯಾಲಯವು ರೂ. 5 ಲಕ್ಷ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತದ ಇಬ್ಬರ ಶೂರಿಟಿ, ತನಿಖೆಗೆ ಸಂಪೂರ್ಣ ಸಹಕಾರ ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ತೊರೆಯಬಾರದು ಎಂಬ ಪ್ರಮುಖ ಷರತ್ತುಗಳನ್ನು ವಿಧಿಸಿದೆ.
2016ರಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.


