
ಮಂಗಳೂರು: ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಬಿ.ಸಿ.ರೋಡ್ ಫ್ಲೈಓವರ್ನಿಂದ ಕೆಳಗಿನ ಸರ್ವೀಸ್ ರಸ್ತೆಗೆ ಬಿದ್ದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಫ್ಲೈಓವರ್ನಲ್ಲಿ ಸಾಗುತ್ತಿದ್ದ ಬೈಕ್ ಸವಾರ ಏಕಾಏಕಿ ನಿಯಂತ್ರಣ ಕಳೆದುಕೊಂಡು ಮೇಲಿನಿಂದ ಕೆಳಗಿನ ಸರ್ವೀಸ್ ರಸ್ತೆಗೆ ಬಿದ್ದಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಸರ್ವೀಸ್ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದ ಕಾರಣ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಅಪಘಾತದಲ್ಲಿ ಗಾಯಗೊಂಡ ಸವಾರನನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಸವಾರ ಹೆಲ್ಮೆಟ್ ಧರಿಸಿದ್ದರಿಂದ ತಲೆಗೆ ಯಾವುದೇ ಗಾಯವಾಗಿಲ್ಲ ಎಂದು ತಿಳಿದುಬಂದಿದೆ. ಅತ್ತಾವರ ನಿವಾಸಿ ಎನ್ನಲಾಗಿರುವ ಸವಾರನ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ಫ್ಲೈಓವರ್ನಿಂದ ಕೆಳಕ್ಕೆ ಬೀಳಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


