ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ರಾಜ್ಯಪಾಲರಿಗೆ ಅವಮಾನ ಆರೋಪ ಮತ್ತು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‍ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದ್ದು, ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸಚಿವರಾದ ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ ಎಂದು ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಅಲ್ಲದೇ, ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.