
ಉಡುಪಿ: ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಹಾಗೂ ಅದಕ್ಕೆ ಸಂಬಂಧಿಸಿದ ವಿವಾದಕ್ಕೆ ಬಿಜೆಪಿ ಸರ್ಕಾರವೇ ಸಂಪೂರ್ಣ ಹೊಣೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.
ಬಿಜೆಪಿ ಆಡಳಿತಾವಧಿಯಲ್ಲೇ ಥೀಮ್ ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ನೀಡಲಾಗಿತ್ತು. ಕಂಚಿನ ಪ್ರತಿಮೆ ಸ್ಥಾಪಿಸುವುದಾಗಿ ಘೋಷಿಸಿದ್ದೂ ಬಿಜೆಪಿ ನಾಯಕರೇ. ಆದರೆ ಈಗ ಸಮಸ್ಯೆ ಸೃಷ್ಟಿಸಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ಟೀಕಿಸುವ ನೈತಿಕ ಹಕ್ಕು ಬಿಜೆಪಿಗೆ ಇಲ್ಲ. ಥೀಮ್ ಪಾರ್ಕ್ ನಿರ್ಮಾಣಕ್ಕೆ ಕಾಂಗ್ರೆಸ್ ಕೂಡ ಬೆಂಬಲ ನೀಡಿತ್ತು. ಆದರೆ ಕಾಮಗಾರಿ ಪೂರ್ಣಗೊಂಡ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ಜಿಲ್ಲೆಯ ಜನರಿಗೆ ಸಂಪೂರ್ಣ ಅರಿವಿದೆ. ಜನರಿಗೆ ಹಿಂದಿನ ಘಟನೆಗಳನ್ನು ಮರೆಮಾಚಲು ಸಾಧ್ಯವಿಲ್ಲ. ಬಿಜೆಪಿ ನಾಯಕರು ಪದೇಪದೇ ಹಿಂದಿನ ವಿಚಾರಗಳನ್ನು ಮರೆತಂತೆ ವರ್ತಿಸಬಾರದು ಎಂದು ಹೇಳಿದರು.
ಪಾರ್ಕ್ ನಿರ್ಮಿಸಿ ಸಮಸ್ಯೆ ಸೃಷ್ಟಿಸಿದ ಬಳಿಕ ಈಗ ಪ್ರತಿಭಟನೆ ನಡೆಸಿ ಜನರ ಆಕ್ರೋಶಕ್ಕೆ ಗುರಿಯಾಗಬಾರದು. ಈ ವಿವಾದಕ್ಕೆ ಬಿಜೆಪಿ ಆಡಳಿತಾವಧಿಯೇ ಕಾರಣವಾಗಿದ್ದು, ಇದರಲ್ಲಿ ಕಾಂಗ್ರೆಸ್‌ನ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಪ್ರಕರಣ ನ್ಯಾಯಾಲಯದಲ್ಲಿದ್ದ ಕಾರಣ ಈವರೆಗೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ನ್ಯಾಯಾಲಯದ ಆದೇಶ ಹೊರಬಿದ್ದಿರುವುದರಿಂದ, ಸೂಕ್ತ ಸಮಯದಲ್ಲಿ ಥೀಮ್ ಪಾರ್ಕ್ ಅನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ ಸಮಸ್ಯೆ ಬಗೆಹರಿಸಲಾಗುವುದು. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಿಜ್ವಾನ್ ಅರ್ಷದ್ ತಿಳಿಸಿದರು.


