ಉಡುಪಿ: ರಾಜ್ಯ ಸರ್ಕಾರ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷ್ಯ ಮಾಡಿದೆ ಎಂದು ಉಡುಪಿ ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳು ಆರೋಪಿಸಿದ್ದಾರೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನೀಲ್ ಕುಮಾರ್, ಯಶ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ ಮತ್ತು ಗುರುರಾಜ್ ಗಂಟಿಹೊಳೆ ಉಡುಪಿಯಲ್ಲಿ ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕರಾವಳಿಯ ಮೂರು ಜಿಲ್ಲೆಗಳು ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದ್ದು, ಕಾಂಗ್ರೆಸ್ ಸರ್ಕಾರ ಒಂದು ರೂಪಾಯಿ ಕೂಡಾ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಜಿಲ್ಲಾಡಳಿತ ನಿರಂತರ ಅಸಹಕಾರ ನೀಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಶಾಸಕರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆಯಲ್ಲದೇ ಶಾಸಕರ ಅನುದಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕರಾವಳಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಸಹಕಾರ ನೀಡುತ್ತಿದ್ದು, ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಒಂದು ಬಿಡಿ ಕಾಸು ಕೂಡಾ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಶಾಸಕರು, ಐದು ಜನ ಬಿಜೆಪಿ ಶಾಸಕರು ಇದ್ದಾರೆ ಎನ್ನುವ ಕಾರಣಕ್ಕೆ ಅನುದಾನ ನೀಡುತ್ತಿಲ್ಲ ಎಂದೂ ಆರೋಪಿಸಿದ್ದಾರೆ.
ಇದೇ ವೇಳೆ, ಕರಾವಳಿಯ ನಿರ್ಲಕ್ಷವನ್ನು ಹತ್ತು ದಿನದೊಳಗೆ ಸರಿಪಡಿಸದಿದ್ದರೆ, ಅನುದಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುವುದಾಗಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಶಾಸಕರು ಎಚ್ಚರಿಸಿದ್ದಾರೆ.