
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಕಲ್ಮಂಜ ಗ್ರಾಮದ ನಿಡಿಗಲ್ ಎಂಬಲ್ಲಿ ಗುರುವಾರ ಮುಂಜಾನೆ ಕಾರೊಂದು ರಸ್ತೆ ಬದಿಯ ಸುಮಾರು 15 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಆರು ಮಂದಿಯ ಪೈಕಿ ಐವರು ಗಾಯಗೊಂಡಿದ್ದಾರೆ.
ಬೆಳಗಾವಿ ಮೂಲದ ಕಾರು ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ನಿಡಿಗಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಂದಕಕ್ಕೆ ಬುಡಮೇಲಾಗಿ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ ಕಾರಿನಿಂದ ಹೊರತೆಗೆದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತ ನಡೆದ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ಆಳವಾದ ಕಂದಕವಿದೆ. ಆದರೆ ವಾಹನಗಳು ಕಂದಕಕ್ಕೆ ಬೀಳದಂತೆ ತಡೆಬೇಲಿ ಅಳವಡಿಸಿಲ್ಲ. ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಇಂತಹ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


