ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ವಿದೇಶಾಂಗ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.
ಕನ್ನಡಿಗರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಪತ್ರ ಬರೆದಿದ್ದು, ಕನ್ನಡಿಗರ ನೆರವಿಗೆ ಧಾವಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಪ್ರವಾಸ, ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ತೆರಳಿರುವ ಕನ್ನಡಿಗರು ವಿಮಾನಗಳ ರದ್ದತಿಯಿಂದ ಸಮಸ್ಯೆಗೆ ಸಿಲುಕಿದ್ದು, ರಾಯಭಾರ ಕಚೇರಿಗಳ ಮೂಲಕ ಅಗತ್ಯ ರಕ್ಷಣೆ ಮತ್ತು ಮಾಹಿತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಮನವಿ ಮಾಡಿದ್ದಾರೆ.
ಕನ್ನಡಿಗರನ್ನು ಭಾರತಕ್ಕೆ ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಬೇಕು ಮತ್ತು ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಸಾಧಿಸಲು ವ್ಯವಸ್ಥೆ ಮಾಡಬೇಕು ಎಂದು ಕೂಡಾ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಅಲ್ಲದೇ, ಕೇಂದ್ರ ವಿಮಾನಯಾನ ಸಚಿವಾಲಯಕ್ಕೂ ಪತ್ರ ಬರೆದಿರುವ ಶಾಲಿನಿ ರಜನೀಶ್ ಅಗತ್ಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ.


