ಬೆಂಗಳೂರು: ಮಳೆಹಾನಿಯ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು. ಈ ವೇಳೆ, ರಾಜ್ಯದಲ್ಲಿ ಪ್ರವಾಹದಿಂದ ಜುಲೈ, ಆಗಸ್ಟ್ ಹಾಗೂ ಈ ತಿಂಗಳು ಸಂಭವಿಸಿದ ಹಾನಿಯ ಕುರಿತು ಚರ್ಚಿಸಿದರು. ಅತಿ ಹೆಚ್ಚು ಭೂಕುಸಿತ, ಸಮುದ್ರ ಕೊರೆತ ಸಂಭವಿಸಿರುವ ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಭೇಟಿ ನೀಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ರಾಜ್ಯವು 330 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿದ್ದು, ಸಮುದ್ರ ಕೊರೆತ ತಡೆಗಟ್ಟಲು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ, ಹೊಸ ಜಾಗಗಳಲ್ಲಿ ಕಡಲ್ಕೊರೆತ ಉಂಟಾಗಿದ್ದು, ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ ಎಂದು ಪ್ರತಿಪಾದಿಸಿದರು.


