ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಮೊದಲ ತಲೆದಂಡವಾಗಿದೆ.ವಿಧಾನಸೌಧದ ಮುಂದೆ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಲು ಕಾರಣವಾದ ಆರೋಪದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜು ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶದ ಮೇರೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಗೋವಿಂದರಾಜು ಅವರನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ನಿನ್ನೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಗೋವಿಂದರಾಜು ವಿರುದ್ಧ ಸಚಿವರಿಂದ ಅಸಮಾಧಾನ ವ್ಯಕ್ತವಾಗಿತ್ತಲ್ಲದೇ, ಇಂದು ಸುದ್ದಿಗೋಷ್ಠಿಯಲ್ಲಿ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡಾ ಪ್ರಸ್ತಾಪಿಸಿದ್ದರು.ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಕೆ. ಗೋವಿಂದರಾಜು, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿದ್ದಾರೆ.