ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶೈಕ್ಷಣಿಕ ಸಮಸ್ಯೆಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಜುಲೈ 20 ರಿಂದ 25 ರ ನಡುವೆ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾಗಿದ್ದ ಎಲ್ಲಾ ಎಫ್ಐಆರ್ಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಯುವ ಪ್ರತಿಭಟನಾಕಾರರ ಭವಿಷ್ಯವನ್ನು ಕಾಯುವ ಮತ್ತು ಪರಿಪೂರ್ಣ ನ್ಯಾಯ ಒದಗಿಸುವ ಉದ್ದೇಶದಿಂದ, ಸಂವಿಧಾನದ 142ನೇ ವಿಧಿಯನ್ವಯ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಹಾಗೂ ಸಂಬಂಧಿತ ರಾಜ್ಯ ಸರ್ಕಾರಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ಈ ಆದೇಶದ ಅನ್ವಯ ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗಳು ಸಂಪೂರ್ಣವಾಗಿ ರದ್ದಾಗಿವೆ. ಅಷ್ಟೇ ಅಲ್ಲದೆ, ದೇಶದ ಇತರ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಇಂತಹುದೇ ಪ್ರಕರಣಗಳ ತನಿಖೆಯನ್ನು ತಕ್ಷಣವೇ ಮುಕ್ತಾಯಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಜೊತೆಗೆ, ಈ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಹೊಸ ಎಫ್ಐಆರ್ ದಾಖಲಿಸಬಾರದು ಎಂದೂ ನ್ಯಾಯಪೀಠವು ಖಡಕ್ ಆದೇಶ ನೀಡಿದೆ.


