Friday, November 6, 2026
Homeಪ್ರಮುಖ-ಸುದ್ದಿಬೆಲೆ ಏರಿಕೆ ಮಾಡುವುದರಲ್ಲೇ ಕಾಂಗ್ರೆಸ್ ಸರ್ಕಾರದ ಗಮನ: ಶಾಸಕ ಅರವಿಂದ ಬೆಲ್ಲದ್ ಟೀಕೆ

ಬೆಲೆ ಏರಿಕೆ ಮಾಡುವುದರಲ್ಲೇ ಕಾಂಗ್ರೆಸ್ ಸರ್ಕಾರದ ಗಮನ: ಶಾಸಕ ಅರವಿಂದ ಬೆಲ್ಲದ್ ಟೀಕೆ

- Advertisement -
- Advertisement -

ರಿಯಲ್ ಎಸ್ಟೇಟ್ ಸಿಎಂ ಎಂದು ಕರೆಸಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈಗ ‘ಬೆಲೆ ಏರಿಕೆ ದೊರೆ’ ಎಂಬ ಹೆಸರು ಕೂಡ ಸೇರಿದೆ ಎಂದು ಶಾಸಕ ಅರವಿಂದ ಬೆಲ್ಲದ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್, ಹಾಲು ಮತ್ತು ನೀರಿನ ದರವನ್ನು ಹೆಚ್ಚಿಸಿತ್ತು. ಈಗ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮತ್ತೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇ.42ರಷ್ಟು ಹೆಚ್ಚಿಸಲಾಗಿದೆ. ಬಡವರು ಮತ್ತು ಕೂಲಿ ಕಾರ್ಮಿಕರು ಹೆಚ್ಚಾಗಿ ಬಸ್‌ಗಳನ್ನು ಬಳಸುತ್ತಾರೆ. ಇಂತಹ ಸಂದರ್ಭದಲ್ಲಿ ದರ ಏರಿಕೆ ಮಾಡಿರುವುದು ಜನರಿಗೆ ತೊಂದರೆಯಾಗಿದೆ ಎಂದು ಅವರು ಹೇಳಿದರು.

ಹಾಲು, ತುಪ್ಪ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯನ್ನೂ ಹೆಚ್ಚಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಸ್ಟ್ಯಾಂಪ್ ಡ್ಯೂಟಿ ದರವೂ ಏರಿಕೆಯಾಗುವ ಸಾಧ್ಯತೆಯಿದೆ. ಸರ್ಕಾರ ಜನರ ಮೇಲೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಹೊರೆ ಹಾಕುತ್ತಿದೆ ಎಂದು ಟೀಕಿಸಿದರು.

ಸರ್ಕಾರಕ್ಕೆ ಸಾಮಾನ್ಯ ಜನರ ಬಗ್ಗೆ ಕಾಳಜಿಯಿಲ್ಲ. ಜನರು ಈ ಸರ್ಕಾರದ ಆಡಳಿತದಿಂದ ಬೇಸತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ನೀಡುವುದಿಲ್ಲ ಎಂದು ಸರ್ಕಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ. ವಿಧವಾ ವೇತನ, ವೃದ್ಧಾಪ್ಯ ವೇತನ ಮತ್ತು ಅಂಗವಿಕಲರ ಪಿಂಚಣಿ ಕೂಡ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ ಎಂದು ಆರೋಪಿಸಿದರು.

ಬಡ ವಿದ್ಯಾರ್ಥಿಗಳ ಹಾಸ್ಟೆಲ್ ವೆಚ್ಚ ಹಾಗೂ ಬಸ್‌ಗಳ ಡೀಸೆಲ್ ಖರ್ಚಿಗೂ ಹಣ ನೀಡುತ್ತಿಲ್ಲ. ಆದರೆ ಜನರಿಂದ ಹೆಚ್ಚು ಹಣ ವಸೂಲಿ ಮಾಡುವ ಕೆಲಸ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಎಂಎಫ್‌ನಲ್ಲಿ ವಿವಿಧ ಕಡೆ ಆಡಳಿತಾತ್ಮಕ ವೆಚ್ಚಗಳು ಹೆಚ್ಚಾಗಿವೆ. ಮೊದಲು ಈ ವೆಚ್ಚಗಳನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಪಕ್ಕದ ತಮಿಳುನಾಡಿನಲ್ಲಿ ಬಸ್ ಪ್ರಯಾಣ ದರ ಎಷ್ಟಿದೆ ಎಂಬುದನ್ನು ಪರಿಶೀಲಿಸಲಿ. ಜನರ ಮೇಲೆ ಪದೇಪದೇ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದರು.

- Advertisement -

Latest News

error: Content is protected !!