ಪುತ್ತೂರು: ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಚಟುವಟಿಕೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡಿಲ್ಲ. ಕೇವಲ ಗ್ಯಾರಂಟಿಯನ್ನು ಬಿಟ್ಟರೆ ಇತರ ಯಾವುದೇ ಹೇಳಿಕೊಳ್ಳುವ ಕೆಲಸ ಮಾಡಿಲ್ಲ. ಸರಕಾರದ ವೈಫಲ್ಯಕ್ಕೆ ಸರಿಯಾಗಿ ಮತದಾರರು ಈ ಚುನಾವಣೆಯಲ್ಲಿ ಪಾಠ ಕಲಿಸುವರು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ ಒಂದು ಅವಧಿಯನ್ನು ಹೊರತು ಪಡಿಸಿ 1988ರಿಂದ ಈ ತನಕ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಮತದಾರರು ನಿರಂತರವಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಈ ಬಾರಿಯೂ ಬಿಜೆಪಿ ಹಾಗೂ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವರು,’ ಎಂದು ಹೇಳಿದರು
ಹಿಂದಿನ ಬಿಜೆಪಿ ಸರಕಾರವು ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೂ ವಿವೇಕ ಕೊಠಡಿಗಳಲ್ಲದೇ, 10 ಸರಕಾರಿ ಎಂಜಿನಿಯರಿಂಗ್ ಮತ್ತು 7 ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಿತ್ತು. ಶಿಕ್ಷಣ ಮತ್ತು ಪದವೀಧರ ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದೆ. ಆದರೆ ಈಗಿನ ಸರಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸುತ್ತಿಲ್ಲ,’ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ವಿಧಾನ ಪರಿಷತ್ ಚುನಾವಣ ಸಹ ಸಂಚಾಲಕ ವಿಕಾಸ್ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.


