ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೆ.19 ರಂದು ರಾಜೀನಾಮೆ ನೀಡಿದ್ದಾರೆ.
ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೇಖರ್ ಕುಕ್ಕೇಡಿ ಅವರ ರಾಜೀನಾಮೆ ಬೆಳ್ತಂಗಡಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ತಮ್ಮ ರಾಜೀನಾಮೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶೇಖರ್ ಕುಕ್ಕೇಡಿ ಅವರು ಕಳೆದ ಹಲವಾರು ವರುಷಗಳಿಂದ ಡಿಸಿ ಮನ್ನಾ ಭೂಮಿ ಸೇರಿದಂತೆ ಪರಿಶಿಷ್ಟ ಜಾತಿ ,ಪಂಗಡಗಳ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದರೂ ಸರ್ಕಾರ ನಮ್ಮ ಬೇಡಿಕೆಯನ್ನು ಕಡೇಗಣಿಸಿದೆ. ಸೆ.18 ರಂದು ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಮಠ ಮಂದಿರಗಳಿಗೂ ಅನುದಾನ ಬಗ್ಗೆ ಪ್ರಸ್ತಾಪ ಮಾಡಲಾಗಿದ್ದರೂ ನಮ್ಮ ಆದಿ ದ್ರಾವಿಡ ಅಲೇರಿ ಮೂಲ ಕ್ಷೇತ್ರ ಅಭಿವೃದ್ಧಿ ಬಗ್ಗೆ ಯಾವುದೇ ಅನುದಾನ ಘೋಷಿಸಿಲ್ಲ .ಡಿಸಿ ಮನ್ನಾ ಭೂಮಿ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಕುರಿತು ಚರ್ಚೆಯಾಗಿದ್ದರೂ, ಈ ವಿಚಾರಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕ್ರಮ ಕೈಗೊಳ್ಳದೇ ದಲಿತರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿ ಕಡೇಗಣಿಸಿರುವುದು ಬೇಸರ ತಂದಿದೆ.ವಿಶೇಷವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ಹಾಗೂ ಅನುದಾನ ದೊರೆಯದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.ಡಿಸಿ ಮನ್ನಾ ಭೂಮಿಯ ಸಮಸ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಜನರನ್ನು ಕಾಡುತ್ತಿರುವ ಪ್ರಮುಖ ವಿಚಾರವಾಗಿದ್ದು, ಅರ್ಹ ಫಲಾನುಭವಿಗಳಿಗೆ ಭೂಮಿ ಹಕ್ಕು ಹಾಗೂ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ದೊರಕಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಈ ವಿಚಾರಕ್ಕೆ ಸೂಕ್ತ ಪರಿಹಾರ ದೊರೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ರೀತಿಯಲ್ಲಿ ಕ್ರಮ ಕೈಗೊಳ್ಳದಿರುವುದು ನಿರಾಶೆ ಮೂಡಿಸಿದೆ.
ಅದೇ ರೀತಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಅಗತ್ಯ ಅನುದಾನದ ವಿಚಾರದಲ್ಲಿಯೂ ಹೆಚ್ಚಿನ ಆದ್ಯತೆ ನೀಡಬೇಕಾಗಿತ್ತು. ಆದರೆ ಈ ವಿಚಾರಗಳ ಬಗ್ಗೆ ಸಮರ್ಪಕವಾಗಿ ಸ್ಪಂದಿಸದಿರುವುದು ತಮ್ಮಂತಹ ಪಕ್ಷದ ಕಾರ್ಯಕರ್ತರಿಗೆ ನೋವುಂಟು ಮಾಡಿದೆ.
ಪಕ್ಷದ ಸಿದ್ಧಾಂತ ಹಾಗೂ ಜನಪರ ವಿಚಾರಗಳನ್ನು ಮುಂದಿಟ್ಟುಕೊಂಡು ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಕೆಲಸ ಮಾಡಿದ್ದರೂ, ತಮ್ಮ ಕ್ಷೇತ್ರ ಹಾಗೂ ಸಮುದಾಯದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ದೊರಕದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ


