
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೀವ ಬೆದರಿಕೆ ಒಡ್ಡಿ ಹಾಗೂ ನೀಟ್ (NEET) ವಿದ್ಯಾರ್ಥಿ ಚಳವಳಿಯನ್ನು ಹಗುರವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರನ್ನು ‘ರಾವಣ’ನಿಗೆ ಹೋಲಿಸಿ ಹಾಕಲಾಗಿದ್ದ ಪೋಸ್ಟರ್ ಸಾರ್ವಜನಿಕರ ಗಮನ ಸೆಳೆಯಿತು. ಶಾಸಕರ ನಡವಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಿರಂತರ ಘೋಷಣೆಗಳನ್ನು ಕೂಗಿದರು.
ಈ ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಾಗ್ಮಿ ನಿಕೇತ್ ರಾಜ್ ಮೌರ್ಯ, ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಗೋಪಾಲ್ ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಅಮೃತ್ ಶೆಣೈ ಹಾಗೂ ಪ್ರಖ್ಯಾತ್ ಶೆಣೈ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.


