ಕಾಸರಗೋಡು: ರಕ್ಷಿತಾರಣ್ಯದಲ್ಲಿ ಜಿಂಕೆ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಕರಿಕ್ಕೆ ನಿವಾಸಿಗಳಾದ ಎಂ.ಎ. ಸುಬೀರ್ (46) ಮತ್ತು ನೌಫಲ್ (37) ಬಂಧಿತರು. ನ್ಯಾಯಾಲಯವು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದ ಬಳಿಕ ಆರೋಪಿಗಳು ಅರಣ್ಯ ಇಲಾಖೆ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಸೆಪ್ಟೆಂಬರ್ 10ರಂದು ಪನತ್ತಡಿ ರಕ್ಷಿತಾರಣ್ಯ ಪ್ರದೇಶಕ್ಕೆ ಬೇಟೆಗಾರರ ತಂಡವೊಂದು ಪ್ರವೇಶಿಸಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದಾಗ, ಬೇಟೆಗಾರರು ಕಾಡಿನೊಳಗೆ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ನಾಡಕೋವಿ, ಒಂದು ಸಜೀವ ಗುಂಡು, ಎರಡು ಕತ್ತಿಗಳು ಮತ್ತು ಎರಡು ಟಾರ್ಚ್ಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ಆರೋಪಿಯ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಸುಮಾರು 40 ಕೆ.ಜಿ. ಜಿಂಕೆ ಮಾಂಸವನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದರು.
ಬಂಧಿತನ ವಿಚಾರಣೆ ವೇಳೆ ಸುಬೀರ್ ಮತ್ತು ನೌಫಲ್ ಅವರ ಹೆಸರುಗಳು ಬಹಿರಂಗವಾಗಿದ್ದವು. ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತಿದ್ದಂತೆ ಇಬ್ಬರೂ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಶರಣಾಗಿದ್ದಾರೆ.
ಈ ಬೇಟೆ ಜಾಲದಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.


