ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಲಕ್ಷಪ್ಪ ಕೋಡಿ ನಿವಾಸಿ, ದಿವಂಗತ ನಾರಾಯಣ ಶೆಟ್ಟಿ ಅವರ ಪುತ್ರ ನರಸಿಂಹ ಶೆಟ್ಟಿ (ಯಾನೆ ‘ಮಾಣಿ ನರಸಿಂಹ’) ಅವರಿಗೆ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರು ಸಲ್ಲಿಸಿದ ವರದಿಯನ್ನಾಧರಿಸಿ, ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55(ಎ) ಮತ್ತು 55(ಬಿ) ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಪ್ರಸ್ತಾವನೆಯಂತೆ ನರಸಿಂಹ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡಲು ನಿರ್ಧರಿಸಲಾಗಿದ್ದು, ಈ ಕ್ರಮಕ್ಕೆ ಸಂಬಂಧಿಸಿದಂತೆ ಎದುರುದಾರರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ 09-09-2026 ರ ಒಳಗಾಗಿ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರ ಮುಂದೆ ಹಾಜರುಪಡಿಸುವಂತೆ ನೋಟಿಸ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.


