
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರದ್ದು ಬಂಡೆ ಹೃದಯವಲ್ಲ, ಹೂವಿನಂತಹ ಹೃದಯ. ಅವರು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಮಾತನಾಡಿದ ಅವರು, ಕಾರ್ಯಕರ್ತೆಯರು ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಕೆಲಸ ಮತ್ತು ಕಷ್ಟಗಳ ಬಗ್ಗೆ ಎಲ್ಲರೂ ಕೇವಲ ಮಾತಿನಲ್ಲಿ ಅನುಕಂಪ ತೋರುತ್ತಿದ್ದೇವೆ. ತಿಂಗಳಿಗೆ ನೀಡುವ 7ರಿಂದ 8 ಸಾವಿರ ರೂಪಾಯಿ ಗೌರವಧನದಲ್ಲಿ ಜೀವನ ನಡೆಸಲು ಸಾಧ್ಯವಿಲ್ಲ ಎಂದು ಅವರು ಹೇಳುತ್ತಿದ್ದಾರೆ. ಈ ಹಿಂದೆ ಆಶಾ ಕಾರ್ಯಕರ್ತೆಯರನ್ನು ದೆಹಲಿಗೆ ಕರೆಸಿ ಕೇಂದ್ರ ಸಚಿವರನ್ನು ಭೇಟಿ ಮಾಡಿಸಿದ್ದೆ. ಅವರ ಬೇಡಿಕೆಗಳನ್ನು ಈಡೇರಿಸುವುದು ಎಲ್ಲರ ಕರ್ತವ್ಯ ಎಂದರು.
ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿತ್ತು. ಈಗ ಅವರು ಅದನ್ನೇ ಕೇಳುತ್ತಿದ್ದಾರೆ. ಸರ್ಕಾರಕ್ಕೆ ಅವರ ಬೇಡಿಕೆ ಈಡೇರಿಸಲು ಯಾವುದೇ ಸಮಸ್ಯೆ ಇಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಾಕಷ್ಟು ಅನುಭವವಿದ್ದು, ಈ ಸಮಸ್ಯೆಯನ್ನು ಪರಿಹರಿಸುವ ಸಾಮರ್ಥ್ಯವಿದೆ ಎಂದು ಹೇಳಿದರು.
ಚಳಿಯಲ್ಲಿ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಅವರದ್ದು ಬಂಡೆ ಹೃದಯವಲ್ಲ, ಹೂವಿನ ಹೃದಯ. ಅವರ ಮನಸ್ಸು ಈಗಾಗಲೇ ಕರಗಬೇಕಿತ್ತು. ಜಪಾನ್ ಪ್ರವಾಸದಲ್ಲಿರುವುದರಿಂದ ನಿರ್ಧಾರ ಮುಂದೂಡಿರಬಹುದು. ಅಲ್ಲಿಂದ ವಾಪಸ್ ಬಂದ ಬಳಿಕ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ತಿಳಿಸಿದರು.


