ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ‘ಎಸ್ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಹೋರಾಟ ಉಗ್ರ ಸ್ವರೂಪ ಪಡೆದುಕೊಂಡಿದ್ದು, ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಎಸ್ಐಆರ್ ಸಂತ್ರಸ್ತರು, ಚಿಂತಕರು ಹಾಗೂ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ನಡೆಸುತ್ತಿದ್ದ ಈ ಧರಣಿ ಸ್ಥಳಕ್ಕೆ ಆಗಮಿಸಿ ಕುಂದುಕೊರತೆ ಆಲಿಸುವಂತೆ ಚುನಾವಣಾ ಆಯೋಗದ ಪ್ರತಿನಿಧಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಆಯೋಗದಿಂದ ಸೂಕ್ತ ಸ್ಪಂದನೆ ಸಿಗದಿದ್ದಾಗ, ಆಕ್ರೋಶಗೊಂಡ ಪ್ರತಿಭಟನಾಕಾರರು ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ನಟ ಕಿಶೋರ್ ಕುಮಾರ್, ಹಿರಿಯ ಸಾಹಿತಿ ಎಲ್.ಎನ್. ಮುಕುಂದರಾಜ್, ದಲಿತ ಸಂಘರ್ಷ ಸಮಿತಿಯ ಹಿರಿಯ ನಾಯಕ ಎನ್. ವೆಂಕಟೇಶ್, ಜನಶಕ್ತಿ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಹಾಗೂ ದಲಿತ, ರೈತ, ಮಹಿಳಾ ಮತ್ತು ಭಾಷಾ ಚಳವಳಿಯ ಹಲವಾರು ಮುಖಂಡರನ್ನು ಬಂಧಿಸಿದರು.


