Monday, June 29, 2026
Homeಕರಾವಳಿಉಡುಪಿನಾರಾಯಣ ಗುರು ಹೆಸರಲ್ಲಿ ಅಭಿವೃದ್ಧಿ ನಿಗಮ ಸ್ಥಾಪನೆ;ಸಚಿವ ವಿ ಸುನಿಲ್ ಕುಮಾರ್

ನಾರಾಯಣ ಗುರು ಹೆಸರಲ್ಲಿ ಅಭಿವೃದ್ಧಿ ನಿಗಮ ಸ್ಥಾಪನೆ;ಸಚಿವ ವಿ ಸುನಿಲ್ ಕುಮಾರ್

- Advertisement -
- Advertisement -

ಉಡುಪಿ : ಮಹಾನ್‌ ಸಮಾಜ ಸುಧಾರಕ, ಬಹ್ಮಶ್ರೀ ನಾರಾಯಣಗುರುಗಳ ಹೆಸರಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸಲು ಸಿದ್ಧತೆ ನಡೆಯುತ್ತಿರುವುದಾಗಿ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಲ್ಲವ ಸಮುದಾಯಕ್ಕೆ ಆರ್ಥಿಕವಾಗಿ ಶಕ್ತಿ ನೀಡಲು ನಾರಾಯಣ ಗುರು ಅಭಿವೃಧ್ದಿ ನಿಗಮ ಆರಂಭಿಸಿ, ಸಮುದಾಯದ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.

ಸಮಾಜದಲ್ಲಿ ಮೇಲು-ಕೀಳು, ಜಾತಿಯ ಸಂಘರ್ಷ, ಅಸಮಾನತೆಯ ಧ್ವನಿ ಇಂದಿಗೂ ಜೀವಂತವಾಗಿದೆ. ನಾರಾಯಣ ಗುರುಗಳ ತತ್ವ ಸಿದ್ಧಾಂತಗಳ ಮೂಲಕ ಸಮಾಜದಲ್ಲಿ ಪರಿವರ್ತನೆ ತರಬಹುದು. ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದರು.

ಈ ನಿಗಮದ ಮೂಲಕ ಹಿಂದುಳಿದ ಸಮಾಜದ ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ಧಪಡಿಸಲಾಗುತ್ತದೆ. ಸಮುದಾಯಗಳ ಮಧ್ಯೆ ಸಂಘರ್ಷಕ್ಕೆಡೆ ಮಾಡದೆ, ಯಾರದೇ ಭಾವನೆಗಳನ್ನು ಕೆರಳಿಸದೆ ಸಮಾಜವನ್ನು ಒಗ್ಗೂಡಿಸಿದ ನಾರಾಯಣ ಗುರುಗಳ ಆದರ್ಶವನ್ನು ಇಂದು ಮತ್ತೊಮ್ಮೆ ಸಮಾಜ ಪರಿವರ್ತನೆಗೆ ಬಳಸಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆ ಶಾಲಾ ಪಠ್ಯದಲ್ಲಿ ಅಳವಡಿಕೆಯಾಗಬೇಕು. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಿಕ್ಷಣ ಇಲಾಖೆಗೆ ಪ್ರಸ್ತಾವ ಸಲ್ಲಿಕೆಯಾಗಬೇಕು. ಅಸಮಾನತೆ ವಿರುದ್ಧದ ಹೋರಾಟಕ್ಕೆ ನಾರಾಯಣ ಗುರುಗಳ ಕೊಡುಗೆ ಅಪಾರವಾದುದು ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್,ಎಸ್‌ಪಿ ಎನ್. ವಿಷ್ಣುವರ್ಧನ್, ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಆನಂದ್ ಪೂಜಾರಿ ಉಪಸ್ಥಿತರಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ವಂದಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Latest News

error: Content is protected !!