ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೋಟ ಮಣೂರು ನಿವಾಸಿ ಹಾಗೂ ಆರ್ಎಸ್ಎಸ್ ಮುಖಂಡ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ.
ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್ನಲ್ಲಿ ಸೈಕಲ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲು ನೆರವಾದರು.
ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


