
ಮಂಗಳೂರು: ಮುಕ್ಕ ಸುರತ್ಕಲ್‌ನಲ್ಲಿರುವ ಶ್ರೀನಿವಾಸ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಕ್ಯಾಂಟೀನ್ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿಹೆಚ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಈ ವೇಳೆ ಕ್ಯಾಂಟೀನ್‌ನಲ್ಲಿ ಗ್ರಾಹಕರಿಗೆ ಹಾಗೂ ರೋಗಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.
ಅಲ್ಲದೆ, ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಮೆಸ್‌ನ ಅಡುಗೆ ಕೋಣೆಗೆ ದಿಢೀರ್ ಭೇಟಿ ನೀಡಿ, ಆಹಾರ ತಯಾರಿಕೆಗೆ ಬಳಸುವ ಸಾಮಗ್ರಿಗಳನ್ನು ಪರಿಶೀಲಿಸಿದ್ದಾರೆ. ವಿವಿಧ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ, ಗುಣಮಟ್ಟ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ರೋಗಿಗಳು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಮತ್ತು ಸುರಕ್ಷಿತ ಆಹಾರವನ್ನು ಸಿದ್ಧಪಡಿಸಿ ವಿತರಿಸುವಂತೆ ಕ್ಯಾಂಟೀನ್ ಮತ್ತು ಮೆಸ್ ಸಿಬ್ಬಂದಿಗೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


