ಮಂಗಳೂರು: ಮದುವೆ ಸಮಾರಂಭದ ವೇಳೆ ಮೂರೂವರೆ ವರ್ಷದ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಕೋಡಿಯಾಲ್ಬೈಲ್ನ ಟಿ.ಎಂ.ಎ. ಪೈ ಹಾಲ್ನಲ್ಲಿ ಅ. 18ರಂದು ನಡೆದ ವಿವಾಹ ಸಮಾರಂಭದಲ್ಲಿ ಈ ಘಟನೆ ನಡೆದಿತ್ತು. ಅಪರಿಚಿತ ಮಹಿಳೆಯೊಬ್ಬಳು ಬಾಲಕಿಯ ಕುತ್ತಿಗೆಯಲ್ಲಿದ್ದ ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಳು. ಕಳವಾದ ಚಿನ್ನದ ಸರದ ಮೌಲ್ಯ ಸುಮಾರು ₹1.35 ಲಕ್ಷ ಎಂದು ಅಂದಾಜಿಸಲಾಗಿತ್ತು.
ಈ ಕುರಿತು ಶೀಮಾಬಾನು ಎಂಬವರು ನೀಡಿದ ದೂರಿನ ಮೇರೆಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿತೆ ಮಿನ್ನತ್ (42) ಎಂಬಾಕೆಯನ್ನು ಬಂಧಿಸಿದ್ದಾರೆ. ಮೂಲತಃ ಉಳ್ಳಾಲದ ಕೋಟೆಪುರದ ನಿವಾಸಿಯಾಗಿರುವ ಈಕೆ, ಪ್ರಸ್ತುತ ಉಳ್ಳಾಲದ ಅಕ್ಕರೆಕೆರೆಯ ಅಪಾರ್ಟ್ಮೆಂಟ್ವೊಂದರಲ್ಲಿ ವಾಸವಾಗಿದ್ದಳು. ಬಂಧಿತಳಿಂದ ಕಳವಾದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿತೆಯ ಪತ್ತೆ ಕಾರ್ಯದಲ್ಲಿ ಬರ್ಕೆ ಠಾಣೆಯ ಉಪನಿರೀಕ್ಷಕರಾದ ಗುರುಪ್ಪಕಾಂತಿ, ವಿನಾಯಕ ತೋರಗಲ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು.
ಆರೋಪಿತೆಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಐದು ಕಳವು ಪ್ರಕರಣಗಳು ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಹೊಸ ಭಾರತೀಯ ನ್ಯಾಯ ಸಂಹಿತೆಯ ಕಲಂ 112ರ ಅಡಿಯಲ್ಲಿ ಸಂಘಟಿತ ಅಪರಾಧದ ಆರೋಪವನ್ನೂ ಸೇರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


