ಬೆಂಗಳೂರು: ಲಾಕ್ಡೌನ್ ಜಾರಿಯಲ್ಲಿದ್ದು ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪಿಯುಸಿ ಒಂದು ವಿಷಯದ ಪರೀಕ್ಷೆ ನಡೆಸಬೇಕಿದೆ.
ಇದೇ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಕೊರೋನಾ ಸಮಸ್ಯೆ ಪರಿಹಾರವಾದ ನಂತರ ಎಸ್‌ಎಸ್‌ಎಲ್ಸಿ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಾಕಿ ಇರುವ ಒಂದು ಪತ್ರಿಕೆಯ ಪರೀಕ್ಷೆ ನಡೆಸಲಾಗುವುದು. ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ ಎಂದು ತಿಳಿಸಿದ್ದಾರೆ.
ಎಸ್‌ಎಸ್‌ಎಲ್ಸಿ ಪರೀಕ್ಷೆ ಹಾಗೂ ಪಿಯುಸಿ ಪರೀಕ್ಷೆ ಮೌಲ್ಯಮಾಪನದ ಬಗ್ಗೆ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ. ಕೋರೋನಾ ಸಂಕಷ್ಟ ಪರಿಹಾರವಾದ ನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು. ಸದ್ಯಕ್ಕೆ ಎಸ್‌ಎಸ್‌ಎಲ್ಸಿ ಪರೀಕ್ಷೆ ಕುರಿತಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಕರು ಮೆಂಟರ್ ಆಗಿ ಕೆಲಸ ಮಾಡಲಿದ್ದಾರೆ. ವಿದ್ಯಾರ್ಥಿಗಳ ತಂಡವನ್ನು ರಚಿಸಿ ಮೆಂಟರ್ ನೇಮಿಸಲಾಗಿದೆ. ಅವರು ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತಾರೆ. ಮಕ್ಕಳು ಗೊಂದಲಕ್ಕೆ ಒಳಗಾಗಬಾರದು. ಶಿಕ್ಷಕರು ಸಮಸ್ಯೆಗೆ ಪರಿಹಾರ ಸೂಚಿಸಿ ಮಕ್ಕಳಿಗೆ ಧೈರ್ಯ ತುಂಬಬೇಕು ಎಂದು ಹೇಳಿದ್ದಾರೆ. ಎಸ್‌ಎಸ್‌ಎಲ್ಸಿ ಮಕ್ಕಳಿಗೆ ಎಲ್ಲ ವಿಷಯಗಳ ಬಗ್ಗೆ ಪುನರ್ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
