ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಸಿಬ್ಬಂದಿ ಆಡಳಿತ ಮತ್ತು ಸುಧಾರಣಾ ಇಲಾಖೆ (DPAR) ವಿವಿಧ ಇಲಾಖೆಗಳ ಮುಖ್ಯಸ್ಥರು, ಉಪ ಆಯುಕ್ತರು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಪಟ್ಟಿ ಮಾಡಿದೆ.
ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲವು ನೌಕರರು ಅಸಭ್ಯವಾಗಿ ಬಟ್ಟೆ ಧರಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಡಿಪಿಎಆರ್ ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.


