
ಕಾಸರಗೋಡು; ಹೆಲ್ತ್ ಇನ್‌ಸ್ಪೆಕ್ಟರ್ ಒಬ್ಬರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾಗಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ.
ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಆರೋಗ್ಯ ಕೇಂದ್ರದ ಹೆಲ್ತ್ ಇನ್‌ಸ್ಪೆಕ್ಟರ್ ಆಗಿರುವ ಪತ್ತನಂತಿಟ್ಟ ನಿವಾಸಿ ಮನೋಜ್ ಕೆ.ವಿ. (45) ಮೃತದೇಹ ಮನೆಯ ಶೌಚಾಲಯದಲ್ಲಿ ಪತ್ತೆಯಾಗಿದೆ.
ಜೂ.18ರಂದು ಆಸ್ಪತ್ರೆಗೆ ಬಾರದ ಕಾರಣ ಸಹೋದ್ಯೋಗಿಗಳು ಫೋನ್ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮನೆಗೆ ತೆರಳಿದಾಗ ಒಳಗಿನಿಂದ ಚಿಲಕ ಹಾಕಲಾಗಿತ್ತು. ಒಳಗಿನಿಂದ ವಾಸನೆ ಬೀರುತ್ತಿತ್ತು. ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆರೆದು ನೋಡಿದಾಗ ಶೌಚಾಲಯದಲ್ಲಿ ಮೃತದೇಹ ಪತ್ತೆಯಾಯಿತು. ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅವರು ಎರಡು ತಿಂಗಳ ಹಿಂದೆಯಷ್ಟೇ ಬದಿಯಡ್ಕದಿಂದ ಮಂಜೇಶ್ವರದ ಕುಟುಂಬ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದರು.


