
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಡಿಯೋ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸದ ನಟ ಧನ್ವೀರ್‌ಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ಕಡ್ಡಾಯವಾಗಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ.
ಜೈಲಿನ ವಿಡಿಯೋ ಸೋರಿಕೆ ಪ್ರಕರಣದ ತನಿಖೆಗೆ ನಟ ಧನ್ವೀರ್ ಸಹಕಾರ ನೀಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ (NBW) ಜಾರಿಗೊಳಿಸಲಾಗಿತ್ತು. ಈ ವಾರಂಟ್ ರದ್ದುಗೊಳಿಸುವಂತೆ ಕೋರಿ ಧನ್ವೀರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಅನೂಪ್ ಕುಮಾರ್, ನ್ಯಾಯಾಲಯವು ಈ ಹಿಂದೆ ವಾರಂಟ್‌ಗೆ ತಡೆ ನೀಡಿದ್ದರೂ ಧನ್ವೀರ್ ತನಿಖೆಗೆ ಸಮರ್ಪಕವಾಗಿ ಸಹಕರಿಸುತ್ತಿಲ್ಲ ಎಂದು ತಿಳಿಸಿದರು. ಅಲ್ಲದೆ, ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಅವರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಸರ್ಕಾರದ ಪರ ವಕೀಲರ ವಾದವನ್ನು ಪರಿಗಣಿಸಿದ ಹೈಕೋರ್ಟ್, ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಹಾಗೂ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ನಟ ಧನ್ವೀರ್‌ಗೆ ಸ್ಪಷ್ಟ ಸೂಚನೆ ನೀಡಿದೆ.


