ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸಭೆ ನಡೆಯಿತು.
ವಿಧಾನಸಭೆ ಸ್ಪೀಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಡದ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲಾ ಪಕ್ಷಗಳ ಶಾಸಕರು ಕೂಡಾ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.


